20ಕ್ಕೆ ಅರಸು ಜನ್ಮ ದಿನಾಚರಣೆ, ಸಕಲ ಸಿದ್ದತೆ ಕೈಗೊಳ್ಳಲು ಸೂಚನೆ

By admin

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ ಜನ್ಮ ದಿನಾಚರಣೆಯನ್ನು ಆಗಸ್ಟ್ 20 ರಂದು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿ.ದೇವರಾಜು ಅರಸು ಅವರ 109 ನೇ  ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಮಟ್ಟದ ಅಧಿಕಾರಿಗಳು, ಎಲ್ಲಾ ಸಂಘ ಸಂಸ್ಥೆಯ ಮುಖಂಡರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಹಿಂದುಳಿದ ವರ್ಗಗಳ ಹರಿಕಾರರಾಗಿರುವ ಡಿ.ದೇವರಾಜು ಅರಸು ಅವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ , ಸ್ವಚ್ಛತೆ ಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಕಳೆದ ಸಾಲಿನ ಶೈಕ್ಷಣಿಕ ವರ್ಷದಲ್ಲಿ  ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ ಮತ್ತು ಪಿಹೆಚ್ ಡಿ ಪದವಿಯಲ್ಲಿ ಹೆಚ್ಚು ಅಂಕ ಪಡೆದ  ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಅರಸು ಜಯಂತಿ ಅಂಗವಾಗಿ ಪ್ರಬಂಧ ಸ್ಪರ್ಧೆ ಹಾಗೂ ಇತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿಜೇತರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ವಿತರಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಗಂಗಾಧರ ದೊಡ್ಡಮನಿ, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಅಪ್ಪಣ್ಣ ಚಿನ್ನಾಕರ್, ಮುಖಂಡರಾದ ಮರೆಪ್ಪ ಚಟ್ಟೆರಕರ್, ಭೀಮರಾಯ ಠಾಣಗುಂದಿ,  ವಿಶ್ವನಾಥ ನೀಲಹಳ್ಳಿ,  ಮಡಿವಾಳಪ್ಪ ಬಿಜಾಸಪುರ, ತಾಯಪ್ಪ ಯಾದವ್, ಅಶೋಕ ವಾಟ್ಕರ್ , ನಾಗಪ್ಪ ಯಾದವ್ ವಡಿಗೇರಾ, ಭೀಮರಾಯ ಹಳಿಮನಿ, ಬಸಲಿಂಗಪ್ಪ ನಾಯಕ ನೀಲಹಳ್ಳಿ, ಮಹೇಂದ್ರ ಕುಮಾರ್ ಅನಪುರ, ಮಲ್ಲಿಕಾರ್ಜುನ ಮೇಟಿ,ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಂತೋಷರೆಡ್ಡಿ, ಕಚೇರಿಯ ವ್ಯವಸ್ಥಾಪಕ ಸಾಬಯ್ಯ  ಗುತ್ತೇದಾರ ಸೇರಿದಂತೆ ಇತರೆ ಹಿಂದುಳಿದ ವರ್ಗಗಳ ಸಮುದಾಯದ ಮುಖಂಡರು ಮತ್ತು ಸಂಘ ಸಂಸ್ಥೆಯ ಪ್ರತಿನಿಧಿಗಳು,  ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.