ಭ್ರಷ್ಟಾಚಾರದಲ್ಲಿ ಮುಳುಗಿದ ರಾಜ್ಯ ಸರ್ಕಾರ

By admin

ಸಿಎಂ ಸಿದ್ಧರಾಮಯ್ಯ ರಾಜೀನಾಮೆ ನೀಡಲಿ  ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜೀವ್ ಆರೋಪ 

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ರಾಜ್ಯ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಇದರಿಂದ ಜನತೆ ಭ್ರಮ ನಿರಸನರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆರೋಪಿಸಿದರು.

ಸರ್ಕಾರದ ಆಡಳಿತದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರೇ ಹಗರಣದಲ್ಲಿ ಮುಳುಗಿದ್ದಾರೆ. ಮುಡಾ ಸೈಟ್ ಹಂಚಿಕೆಯಲ್ಲಿ ನೇರವಾಗಿ ತಮ್ಮ ಪ್ರಭಾವ ಬಳಸಿ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ. ದೂರು ದಾಖಲಾಗಿ ಆರೋಪಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂ.ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯ ಮದ್ಯ ಮಾರಾಟ ಸಂಘದವರು ಹೋರಾಟ ಮಾಡಲು ಅಣಿಯಾಗಿದ್ದಾರೆ. ಈ ಲಂಚದ ಹಣವನ್ನು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಬಳಸಿಕೊಂಡಿದೆ. ಒಂದೆಡೆ ವಾಲ್ಮೀಕಿ ನಿಗಮದ ಅನುದಾನವನ್ನು ದುರ್ಬಳಕೆ ಮಾಡಿಕೊಂಡು ತೆಲಂಗಾಣ ಚುನಾವಣೆಗೆ ಬಳಸಿಕೊಳ್ಳಲಾಗಿದೆ ಎಂದು ಕಿಡಿಕಾರಿದರು.

ಇಷ್ಟು ಸಾಲದು ಎಂಬಂತೆ ಈ ಭ್ರಷ್ಟ ಸರ್ಕಾರದ ಕಣ್ಣು ಇದೀಗ ರೈತರ ಭೂಮಿ ಮೇಲೆ ಬಿದ್ದಿದ್ದು, ವಕ್ಫ್ ಬೋರ್ಡ್ ಮೂಲಕ ಭೂಮಿ ಕಿತ್ತುಕೊಳ್ಳಲು ಮುಂದಾಗಿದೆ. ಇದನ್ನು ನಮ್ಮ ಪಕ್ಷ ಉಗ್ರವಾಗಿ ಖಂಡಿಸಿದ್ದು, ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗಿದೆ. ಅಲ್ಲದೆ, ನಮ್ಮ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸತ್ಯ ಶೋಧನೆಗಾಗಿ 3 ತಂಡಗಳನ್ನು ರಚನೆ ಮಾಡಿದ್ದು, ರಾಜ್ಯದಾದ್ಯಂತ ಸಂಚರಿಸಿ ರೈತರ ಬೆನ್ನಿಗೆ ನಿಲ್ಲುವ ಕೆಲಸ ಮಾಡಲಿದ್ದೇವೆ ಎಂದು ತಿಳಿಸಿದರು.

ಹೊಸ ಬಿಪಿಎಲ್ ಕಾರ್ಡ್ ಗಳನ್ನು ವಿತರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಹೊಸ ಯೋಜನೆಗಳ ಜಾರಿಗೆ ಅನುದಾನವಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಮುಖ್ಯಮಂತ್ರಿ ಸಿದ್ಧರಾಮಯ್ಯ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು. ಅಲ್ಲೀವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಎಂದು ತಿಳಿಸಿದರು.

ಪಕ್ಷದ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ,ಯುವ ಮುಖಂಡ ಮಹೇಶರಡ್ಡಿ ಮುದ್ನಾಳ,ನಿಕಟಪೂರ್ವ ಜಿಲ್ಲಾಧ್ಯಕ್ಷ ಡಾ.ಶರಣಭೂಲರಡ್ಡಿ,ನಿಗಮದ ಮಾಜಿ ಅಧ್ಯಕ್ಷ ದೇವಿಂದ್ರನಾಥ ನಾದ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೇಲಪ್ಪ ಗುಳಗಿ ಮತ್ತು ಪರುಶುರಾಮ ಕುರಕುಂದಿ,ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ್ ಕಾಡಂನೊರ ಸೇರಿದಂತೆ ಆರು ಮಂಡಲ ಅಧ್ಯಕ್ಷರು ಜಿಲ್ಲಾ ಪದಾಧಿಕಾರಿಗಳ, ಜಿಲ್ಲಾ ಮೋರ್ಚಾ ಪದಾಧಿಕಾರಿಗಳ, ಜಿಲ್ಲಾ ಸದಸ್ಯತ್ವ ತಂಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.