ಯಾದಗಿರಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಬರುವ ಅಕ್ಟೋಬರ್ 7 ವರೆಗೆ ರಾಜಿ ಸಂಧಾನದ ಮೂಲಕ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ 90 ದಿನಗಳ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರಾದ ಶ್ರೀ ಮರಳು ಸಿದ್ದಾರಾಧ್ಯ ಹೇಳಿದರು.
ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಇಂದು ಪತ್ರಿಕಾ ಗೋಷ್ಠಿ ನಡೆಸಿದ ಅವರು ಈ ಅಭಿಯಾನ ಅಂಗವಾಗಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗುತ್ತದೆ ಎಂದು ಹೇಳಿದರು.
ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು,ಮೋಟಾರು ಅಪಘಾತ ನ್ಯಾಯಾಧಿಕರಣದ ಪ್ರಕರಣಗಳು, ಚೆಕ್ಕು ಸಾಮಾನ್ಯದ ಪ್ರಕರಣಗಳು, ವಾಣಿಜ್ಯ ಪ್ರಕರಣಗಳು,ಸೇವಾ ಪ್ರಕರಣಗಳು,ರಾಜೀಯಾಗಬಲ್ಲ ಅಪರಾಧಿಯ ಪ್ರಕರಣಗಳು,ಗ್ರಾಹಕ ವ್ಯಾಜ್ಯ ಪ್ರಕರಣಗಳು,ಡಿ ಆರ್ ಟಿ ಪ್ರಕರಣಗಳು,ಭೂ ಸ್ವಾಧೀನ ಪ್ರಕರಣಗಳು ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಇದು ಸುವರ್ಣಾವಕಾಶವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಸಾರ್ವಜನಿಕರು ತಮ್ಮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಇಚ್ಚೀಸಿದಲ್ಲಿ ನ್ಯಾಯಾಲಯಗಳಿಂದಪ್ರಕರಣಗಳನ್ನು ಮಧ್ಯಸ್ಥಿಕೆ ಕೇಂದ್ರಕ್ಕೆ ಸೂಚಿಸಿ ಕೊಂಡಲ್ಲಿ ಅಂತಹ ಪ್ರಕರಣಗಳಲ್ಲಿ ಉಭಯ ಪಕ್ಷಗಾರರನ್ನು ಕರೆಸಿಕೊಂಡು ಜಿಲ್ಲಾ ನ್ಯಾಯಾಲಯದ ಸಮುಚ್ಛಯ ದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಾಗೂ ತಾಲೂಕು ನ್ಯಾಯಾಲಯಗಳು ಆವರಣಗಳಲ್ಲಿರುವ ಮಧ್ಯಸ್ಥಿಕೆ ಕೇಂದ್ರಗಳಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.
ರಾಷ್ಟ್ರೀಯ ಲೋಕ ಅದಾಲತ್ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ರಾಜ್ಯಾದ್ಯಂತ ಹಾಗೂ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳ ಆವರಣಗಳಲ್ಲಿ ಬರುವ ಸೆಪ್ಟೆಂಬರ್ 13ರಂದು ರಾಷ್ಟ್ರೀಯ ಲೋಕ ಅದಾಲತ್ ಗಳನ್ನು ಆಯೋಜಿಸಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯ ಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ತಿಳಿಸಿದರು.
ಅಂದು ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು,ಕಾರ್ಮಿಕ ವಿವಾದಗಳು,ಉದ್ಯೋಗದಲ್ಲಿಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ ಗಳು, ಕೈಗಾರಿಕೆ ಕಾರ್ಮಿಕರ ವೇತನ ಕ್ಕೆ ಸಂಬಂಧಿಸಿದ ಕ್ಲೇಮುಗಳು, ಭೂಸ್ವಾಧೀನ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿ ನ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ,
ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧಿಕರಣದ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ವೈವಾಹಿಕ/ಕುಟುಂಬ ನ್ಯಾಯಾಲಯದ ಪ್ರಕರಣಗಳು(ವಿಚ್ಚೇಧನೆಯನ್ನು) ಹೊರತುಪಡಿಸಿ, ಚೆಕ್ಕು ಅಮಾನ್ಯದ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.
ಹೆಚ್ಚಿನ ಮಾಹಿತಿಗಾಗಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಟೋಲ್ ಫ್ರೀ ಸಂಖ್ಯೆ 1800-425-90900 ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು,ಯಾದಗಿರಿ ಜಿಲ್ಲೆ ನ್ಯಾಯಾಲಯದ ಆವರಣ,ದೂ ಸಂ 08473253243 ಗೆ ಸಂಪರ್ಕಿಸಬಹುದು ಎಂದು ಅವರು ಹೇಳಿದರು.ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀ ಮರಿಯಪ್ಪ ಅವರು ಉಪಸ್ಥಿತರಿದ್ದರು.
