🚨 BREAKING NEWS : “ಯಾದಗಿರಿ | ಭೀಕರ ರಸ್ತೆ ಅಪಘಾತದಿಂದ ಮಾಜಿ ಸಚಿವ ರಾಜೂ ಗೌಡ ಪಾರು”
• ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ :
ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ಪಂದ್ಯ ಮುಗಿಸಿ ಹೈದ್ರಾಬಾದ್‌ನಿಂದ ಯಾದಗಿರಿ ಮಾರ್ಗವಾಗಿ ತಮ್ಮ ಸ್ವಗ್ರಾಮಕ್ಕೆ ತೆರಳುತ್ತಿದ್ದ ಮಾಜಿ ಸಚಿವ ರಾಜೂ ಗೌಡ ಅವರು ಪ್ರಯಾಣಿಸುತ್ತಿದ್ದ ಕಾರು ನಗರದ ಗಂಜ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತಕ್ಕೀಡಾದ ಘಟನೆ ಕಳೆದ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಶಾಖಪಟ್ಟಣದಿಂದ ಸಿಸಿಎಲ್ ಪಂದ್ಯ ವೀಕ್ಷಣೆ ಮುಗಿಸಿ ಹಿಂತಿರುಗುವ ವೇಳೆ, ಯಾದಗಿರಿ ನಗರದ ಗಂಜ್ ಪ್ರದೇಶದ ಹೆದ್ದಾರಿಯಲ್ಲಿ ಹಿಂದಿನಿಂದ ವೇಗವಾಗಿ ಬಂದ ಟ್ರಕ್ ಒಂದು ರಾಜೂ ಗೌಡ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಗೆ ನುಗ್ಗಿ ಅಪಘಾತ ಸಂಭವಿಸಿದೆ.
ಅಪಘಾತದ ಪರಿಣಾಮ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಮಾಜಿ ಸಚಿವ ರಾಜೂ ಗೌಡ ಅವರಿಗೆ ಕೈ–ಕಾಲುಗಳಲ್ಲಿ ಅಲ್ಪಸ್ವಲ್ಪ ತರಚಿದ ಗಾಯಗಳಾಗಿವೆ. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಬಳಿಕ ಅವರು ಮನೆಗೆ ಮರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಹಿನ್ನೆಲೆಯಲ್ಲಿ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ.